ಮಾಘಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ. ಅಲ್ಲದೆ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯ ಆಗಿರುವುದರಿಂದ, ಇಂದು ಸೂರ್ಯ ಆರಾಧನೆಯ 'ರಥ ಸಪ್ತಮಿ' ದಿನವೆಂದು ಆಚರಿಸಲಾಗುತ್ತದೆ. ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆ, ಚೈತನ್ಯವನ್ನು ತುಂಬುವ ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ. ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಿದಂತೆ ಅನಿಸುತ್ತದೆ. ಅಂಗಾಂಗಗಳಲ್ಲಿ ಕಾರ್ಯಕ್ಷಮವಾಗುತ್ತಿವೆ. ಈ ಉಪಕಾರಕ್ಕಾಗಿ ಸೂರ್ಯನನ್ನು ಪೂಜಿಸುವುದು ರೂಢಿಯಲ್ಲಿದೆ. ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಿವೆ.
ವೈವಸ್ವತ ಮನ್ವಂತರದ ಆರಂಭದ ದಿನ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಟ ದಿನ.
ರಥ ಸಪ್ತಮಿ ದಿವಸ ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಉತ್ತಮ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ಈ ದಿವಸ ಸೂರ್ಯಾರಾಧನೆಯನ್ನು ಮಾಡಿದರೆ ಬೇಗ ಗುಣಮುಖರಾಗುತ್ತಾರೆ.
ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯ ನಮಸ್ಕಾರಕ್ಕೆ ನೀಡಬಹುದು. ಏಕೆಂದರೆ ಈ ಅಭ್ಯಾಸವು ಮನಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳು ಸೂರ್ಯನಿಂದ ನಡೆಯುತ್ತಿದೆ.
ರಥಸಪ್ತಮಿ ದಿನದಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ 'ಅರ್ಘ್ಯ' ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯ ಸಂಪತ್ತು ಲಭಿಸುವುದಲ್ಲದೆ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣದಲ್ಲಿದೆ. ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.
ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮಥ್ಯಗಳನ್ನು ಕೊಂಡಾಡುವ ಉದ್ದೇಶದಿಂದಲೇ ಬಳಸಲಾಗಿದೆ.
ದ್ವಾಪರಾಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನ ಮಗ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ವಿವರ ಪಡೆದು ಸಂಚಿತಕರ್ಮದಿಂದ ಬಂದಿರುವ ಈ ಕಾಯಿಲೆಗೆ ರಥಸಪ್ತಮಿ ವ್ರತ ಆಚರಿಸಲು ಹೇಳಿದ್ದರು. ಅದರಂತೆ ರಥಸಪ್ತಮಿಯ ದಿನ ಸೂರ್ಯಾರಾದನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದ. ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಸೂರ್ಯನಿಂದ ಅಕ್ಷಯ ಪಾತ್ರೆ ಪಡೆದಿದ್ದರು.
ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನು ಕೂಡ ಅಗಸ್ತ್ಯರ ಉಪದೇಶದಂತೆ 'ಆದಿತ್ಯ ಹೃದಯ' ದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ 'ಶಮಂಥಕಮಣಿ' ಪಡೆದ ಸತ್ರಾಜಿತ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ 'ಸೂರ್ಯಶತಕ'ವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.
ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.
ವ್ಯಕ್ತಿಯ ಜನ್ಮ ಕುಂಡಲಿಯಲ್ಲಿ ಸೂರ್ಯನು ಬಲಹೀನನಾಗಿದ್ದರೆ ಅಥವಾ ಷಡ್ಬಲವಿರದಿದ್ದರೆ ರಥಸಪ್ತಮಿಯಂದು ಸೂರ್ಯಾರಾಧನೆ ಮಾಡಿದರೆ ದೋಷ ಪರಿಹಾರವಾಗುತ್ತದೆ. ಮಾಣಿಕ್ಯದ ಹರಳು ಧರಿಸಲು ಶುಭ ದಿನವಾಗಿದೆ.
ರಥ ಸಪ್ತಮೀಯು ಯಾವಾಗಲೂ ಅರುಣುದೋಯವ್ಯಾಪಿನಿಯಾಗಿರುವುದರಿಂದ ಸರಿಯಾಗಿ ಸೂರ್ಯೋದಯಕ್ಕೆ ಆಚರಣೆ ಮಾಡಬೇಕು. ರಥ ಸಪ್ತಮಿಯಂದು ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಬೇಕು. ಎಕ್ಕೆ ಎಲೆಯನ್ನು ತಲೆ ಮತ್ತು ಹೆಗಲ ಮೇಲೆ ಇಟ್ಟುಕೊಂಡು ಸ್ನಾನಮಾಡುವುದು ವಿಶೇಷ. ಸ್ನಾನಕಾಲಕ್ಕೆ ಪಠಿಸಬೇಕಾದ ಮಂತ್ರಗಳು -
ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ || ೧ ||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತೇ ಚ ಯೇ ಪುನಃ || ೨ ||
ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತಸಪ್ತಿಕೇ |
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮೀ || ೩ ||
ಹೀಗೆ ಯಾರು ಈ ಮೂರು ಮಂತ್ರೋಚ್ಚಾರಣ ಪೂರಕ ಸ್ನಾನ ಮಾಡಿ ಸೂರ್ಯ ಮತ್ತು ಕೇಶವನ ದರ್ಶನವನ್ನು ಮಾಡುತ್ತಾರೋ, ಅವರು ಕ್ಷಣಮಾತ್ರದಲ್ಲಿ ಪಾಪಗಳಿಂದ ಮುಕ್ತರಾಗುವರು. (ನಿರ್ಣಯಸಿಂಧು)
ಸ್ನಾನಾನಂತರ ಸೂರ್ಯ ಮತ್ತು ಸಪ್ತಮಿತಿಥಿಗೆ ಅರ್ಘ್ಯ -
ಒಂದು ತಾಮ್ರದ ಕಲಶದಲ್ಲಿ (ತಂಬಿಗೆ) ಶುದ್ಧವಾದ ಜಲ, ಅಕ್ಷತೆ, ಚಂದನ, ಬಿಳಿಬಣ್ಣದ ಹೂವುಗಳು, ಗರಿಕೆ, ಎಕ್ಕೆಯ ಎಲೆಗಳನ್ನು ತುಂಬಿಸಿ, ಮುಂದಿನ ಮಂತ್ರಗಳಿಂದ ಸೂರ್ಯ ಮತ್ತು ಸೂರ್ಯಜನನೀಯಾದ ಸಪ್ತಮೀ ತಿಥಿಗೂ ಸಹ ಅರ್ಘ್ಯವನ್ನು ಕೊಡಬೇಕು.
ಸೂರ್ಯಾರ್ಘ್ಯ ಮಂತ್ರ -
ಸಪ್ತಸಪ್ತಿವಹ ಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ ||
ಎಂದು ಸೂರ್ಯನಿಗೆ ಅರ್ಘ್ಯವನ್ನು ಕೊಡಬೇಕು.
ಸಪ್ತಮೀ ಅರ್ಘ್ಯಮಂತ್ರ -
ಜನನೀ ಸರ್ವಲೋಕಾನಾಂ ಸಪ್ತಮೀ ಸಪ್ತಸಪ್ತಿಕೇ |
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯಮಂಡಲೇ ||
ಎಂದು ಸಪ್ತಮೀ ತಿಥಿಯ ಕುರಿತು ಅರ್ಘ್ಯ ಕೊಡಬೇಕು.
ರಥಸಪ್ತಮಿಯ ಪರ್ವ ಎಲ್ಲ ರಾಶಿಯವರಿಗೂ ವಿಶೇಷ ಫಲಪ್ರದ. ಸೂರ್ಯನು ಯಾವುದೇ ಜಾತಕದಲ್ಲಿ ಆತ್ಮರೂಪಿಯಾಗಿ ಇರುತ್ತಾನೆ, ಆದ್ದರಿಂದ ಅವನ ಪ್ರೀತ್ಯರ್ಥ ಪೂಜಾಕಾರ್ಯ ಆರೋಗ್ಯ, ಸಂಪತ್ತು ಮತ್ತು ಆನಂದಪ್ರದ.